ಶಾಲೆಗಳಲ್ಲಿ ಬಿಸಿಯೂಟ ಯೋಜನೆಯನ್ನು ಸಮರ್ಪಕವಾಗಿ ಜಾರಿ ಮಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ಇದು ಸಂವಿಧಾನದ 21ನೇ ವಿಧಿಯಡಿ ದತ್ತವಾಗಿರುವ ಜೀವಿಸುವ ಹಕ್ಕು ಮತ್ತು ಆಹಾರ ಭದ್ರತಾ ಕಾಯ್ದೆಯ ಉಲ್ಲಂಘನೆ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಬಿಸಿಯೂಟ ಯೋಜನೆ ಸ್ಥಗಿತವನ್ನು ಪ್ರಶ್ನಿಸಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮು.ನ್ಯಾ. ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾ.ಅರವಿಂದಕುಮಾರ್ ಅವರ ವಿಭಾಗೀಯ ಪೀಠ, ಕೊರೊನಾ ಅವಧಿಯಲ್ಲಿ ಬಿಸಿಯೂಟ ಯೋಜನೆ ಸ್ಥಗಿತಗೊಳಿಸಿರುವುದು ಮಕ್ಕಳ ಹಕ್ಕಿನ ಉಲ್ಲಂಘನೆ ಎಂದು ಹೇಳಿದೆ. ಬಿಸಿಯೂಟ ಯೋಜನೆಯಲ್ಲಿ ಎಂಟನೇ ತರಗತಿವರೆಗಿನ 6ರಿಂದ 14 ವರ್ಷ ವಯಸ್ಸಿನ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ಪೂರೈಸಲಾಗುತ್ತದೆ. ಕೋವಿಡ್ ಹಿನ್ನೆಲೆಯಲ್ಲಿ ಶಾಲೆಗಳು ಮುಚ್ಚಿರುವುದರಿಂದ, ಮೇ 31ರಿಂದ ಮಕ್ಕಳಿಗೆ ಬಿಸಿಯೂಟ ನೀಡುತ್ತಿಲ್ಲ ಎಂದು ಸರ್ಕಾರದ ಪರ ವಕೀಲರು ತಿಳಿಸಿದರು.
ಅರ್ಜಿದಾರರ ಪರ ವಕೀಲ ಕ್ಲಿಫ್ಟನ್ ರೊಸಾರಿಯೊ, ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆ ಮತ್ತು ಬಿಸಿಯೂಟ ಯೋಜನೆಯ ನಿಯಮಗಳ ಪ್ರಕಾರ, ಫಲಾನುಭವಿ ಮಕ್ಕಳಿಗೆ ರಾಜ್ಯ ಸರ್ಕಾರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಬಿಸಿಯೂಟ ಯೋಜನೆ ಅನುಷ್ಠಾನದಲ್ಲಿ ವಿಫಲವಾಗಿದ್ದು, ಈ ಸಂಬಂಧ ನ.೧೭ರೊಳಗೆ ಪ್ರಮಾಣಪತ್ರ ಸಲ್ಲಿಸುವಂತೆ ಇಲಾಖೆಯ ಕಾರ್ಯದರ್ಶಿಗೆ ನ್ಯಾಯಾಲಯ ನಿರ್ದೇಶನ ನೀಡಿತು. ಪ್ರತಿ ವಿದ್ಯಾರ್ಥಿಗೆ ಎಷ್ಟು ದಿನಗಳೊಳಗೆ, ಯಾವ ರೀತಿ ಪರಿಹಾರ ನೀಡಲಾಗುತ್ತದೆ? ಯೋಜನೆಯ ಆರಂಭಕ್ಕೆ ಏನು ಕ್ರಮ ಕೈಗೊಳ್ಳಲಾಗುವುದು?ವಿದ್ಯಾರ್ಥಿಗಳಿಗೆ ಬಿಸಿಯೂಟ ಒದಗಿಸುವುದೇ ಅಥವಾ ಆಹಾರಧಾನ್ಯ ವಿತರಿಸಲಾಗುತ್ತದೆಯೇ? ಎನ್ನುವ ಕುರಿತು ಪ್ರಮಾಣಪತ್ರದಲ್ಲಿ ಸ್ಪಷ್ಟ ಮಾಹಿತಿ ಒದಗಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಕಾರ್ಯದರ್ಶಿಗೆ ನ್ಯಾಯಾಲಯ ಸೂಚಿಸಿತು. ಅಲ್ಲದೆ, ಅಂಗನವಾಡಿಗಳು ಇನ್ನೂ ಆರಂಭವಾಗಿಲ್ಲ. ಸಮಗ್ರ ಶಿಶು ಅಭಿವೃದ್ಧಿ ಯೋಜನೆ(ಐಸಿಡಿಎಸ್)ಅಡಿಯಲ್ಲಿ ಸಣ್ಣ ಮಕ್ಕಳಿಗೆ ವಿತರಿಸುತ್ತಿದ್ದ ಪೌಷ್ಟಿಕ ಆಹಾರವನ್ನು ಯಾವ ರೀತಿ ನೀಡಲಾಗುತ್ತದೆ ಎಂಬ ಕುರಿತು ಸಂಬಂಧಿಸಿದ ಇಲಾಖೆಯ ಕಾರ್ಯದರ್ಶಿ ಪ್ರಮಾಣಪತ್ರ ಸಲ್ಲಿಸಬೇಕು ಎಂದು ನ್ಯಾಯಾಲಯ ಹೇಳಿತು.
Courtesyg: Google (photo)