ಬೆಂಗಳೂರು: ರಾಜ್ಯದಲ್ಲಿ ಈ ವರ್ಷ 8.51 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್ ಸಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.
ನಗರದ ಸಮಗ್ರ ಶಿಕ್ಷಣ ಕಚೇರಿಯಲ್ಲಿ 2020ರ ಎಸ್‌ಎಸ್‌ಎಲ್ ಸಿ ಪರೀಕ್ಷೆಯ ಯಶೋಗಾಥೆ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ಕೋವಿಡ್-19 ನಡುವೆಯೇ ದೇಶಕ್ಕೆ ಮಾದರಿಯಾಗುವಂತೆ ಪರೀಕ್ಷೆ ನಡೆಸಿದ್ದೇವೆ. ಈ ವರ್ಷದ ಪರೀಕ್ಷೆ ಇನ್ನು ಉತ್ಕೃಷ್ಟ ರೀತಿಯಲ್ಲಿ ನಡೆಸುವ ಸವಾಲು ನಮ್ಮ ಮುಂದಿದೆ ಎಂದರು.
2021ರ ಎಸ್‌ಎಸ್‌ಎಲ್ ಸಿ ಪರೀಕ್ಷೆಗೆ 8.51 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಕಳೆದ ವರ್ಷ 8.48 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು.ಕಳೆದ ವರ್ಷಕ್ಕೆ ಹೋಲಿಸಿದರೆ ಸುಮಾರು 3 ಸಾವಿರ ವಿದ್ಯಾರ್ಥಿಗಳು ಎಸ್‌ಎಸ್‌ಎಲ್ ಸಿ ಪರೀಕ್ಷೆ ನಡೆಯಲಿದೆ ಎಂದು ಹೇಳಿದರು.
ಎಸ್‌ಎಸ್‌ಎಲ್ ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಈಗಾಗಲೇ ಪ್ರಕಟವಾಗಿದ್ದು, ಫೆ.25ರ ನಂತರ ಅಂತಿಮ ವೇಳಾಪಟ್ಟಿ ಬಿಡುಗಡೆ ಮಾಡಲಿದ್ದೇವೆ ಎಂದರು.
ಈವಾರದಲ್ಲಿ ಸಭೆ: 1 ರಿಂದ 5ನೇ ತರಗತಿ ಆರಂಭ ಸಂಬಂಧ ಈ ವಾರದಲ್ಲಿ ಮತ್ತೊಮ್ಮೆ ಕೋವಿಡ್ ನಿರ್ವಹಣಾ ಸಮಿತಿಯ ಸಲಹೆ ಹಾಗೂ ಮಾರ್ಗದರ್ಶನ ಪಡೆಯಲಿದ್ದೇವೆ. 6 ರಿಂದ 8ನೇ ತರಗತಿಗೆ ವಿದ್ಯಾರ್ಥಿಗಳಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಹೀಗಾಗಿ 1 ರಿಂದ 5ನೇ ತರಗತಿ ಹೇಗೆ ಆರಂಭಿಸಬೇಕು ಎನ್ನುವ ಬಗ್ಗೆ ಸಲಹಾ ಸಮಿತಿಯ ಸಲಹೆ ಪಡೆದು ತೀರ್ಮಾನ ಮಾಡಲಿದ್ದೇವೆ ಎಂದರು.
ಸಿಎಂ ಜತೆ ಚರ್ಚೆ: ಖಾಸಗಿ ಶಿಕ್ಷಣ ಸಂಸ್ಥೆಗಳ ಶುಲ್ಕ ಕಡಿತ ನಿರ್ಧಾರವೂ ಮಕ್ಕಳು ಹಾಗೂ ಪಾಲಕ, ಪೋಷಕರಿಗೆ ಪೂರಕವಾಗಿದೆ. ಖಾಸಗಿ ಶಿಕ್ಷಣ ಸಂಸ್ಥೆಜತೆ ಮಾತಾಡುತ್ತೇವೆ. ಖಾಸಗಿ ಶಿಕ್ಷಣ ಸಂಸ್ಥೆಯ ಶಿಕ್ಷಕ, ಶಿಕ್ಷಕೇತರಿಗೆ ಪ್ಯಾಕೇಜ್ ನೀಡಲು ಮುಖ್ಯಮಂತ್ರಿ ಜತೆ ಚರ್ಚಿಸಲಾಗುತ್ತದೆ. ಎಷ್ಟೇ ಆದರೂ ಖಾಸಗಿ ಶಾಲಾಡಳಿತ ಮಂಡಳಿ ಹಾಗೂ ಪಾಲಕ ಪೋಷಕರ ಸಂಬಂಧ ಇನ್ನೂ ಸರಿಯಾಗಿಲ್ಲ. ಇದರಿಂದ ಮಕ್ಕಳ ಮೇಲೆ ಯಾವುದೇ ಪರಿಣಾಮ ಆಗದಂತೆ ಎಚ್ಚರ ವಹಿಸಬೇಕಿದೆ ಎಂದರು