ಕಳೆದ ಮಾರ್ಚ್‌ನಿಂದ ಮುಚ್ಚಿರುವ ವಿಶ್ವವಿದ್ಯಾಲಯಗಳು ಹಾಗೂ ಕಾಲೇಜುಗಳ ಪುನರಾರಂಭಕ್ಕೆ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ) ಗುರುವಾರ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಕೇಂದ್ರೀಯ ವಿಶ್ವವಿದ್ಯಾನಿಲಯಗಳು ಹಾಗೂ ಕೇಂದ್ರದ ಅನುದಾನದಲ್ಲಿ ನಡೆಯುತ್ತಿರುವ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಪುನರಾರಂಭಿಸುವ ಅಧಿಕಾರವನ್ನು ಆಯಾ ಕುಲಪತಿ ಹಾಗೂ ಸಂಸ್ಥೆಯ ಮುಖ್ಯಸ್ಥರಿಗೆ ನೀಡಲಾಗಿದೆ. ವಿಶ್ವವಿದ್ಯಾನಿಲಯಗಳು, ಖಾಸಗಿ ವಿಶ್ವವಿದ್ಯಾಲಯಗಳು ಹಾಗೂ ಕಾಲೇಜುಗಳನ್ನು ಪ್ರಾರಂಭಿಸಲು ಆಯಾ ರಾಜ್ಯ ಸರ್ಕಾರಗಳೇ ನಿರ್ಧಾರ ಕೈಗೊಳ್ಳಬೇಕು ಎಂದು ಯುಜಿಸಿ ತಿಳಿಸಿದೆ. ನಿರ್ಬಂಧಿತ ವಲಯದ ಹೊರಗಿರುವ ವಿಶ್ವವಿದ್ಯಾನಿಲಯಗಳು ಹಾಗೂ ಕಾಲೇಜುಗಳನ್ನು ಪುನರಾರಂಭಿಸಲು ಅವಕಾಶ ನೀಡಬೇಕು. ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿ ಕಾಲೇಜಿಗೆ ಬಾರದಂತೆ ಸೂಚಿಸಬೇಕು. ಈ ವಲಯಗಳಿಗೆ ಭೇಟಿ ನೀಡಬೇಡಿ ಎಂದು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ನಿರ್ದೇಶಿಸಬೇಕು. ಅಲ್ಲದೆ, ಆರೋಗ್ಯ ಸೇತು ಆಪ್ ಡೌನ್‌ಲೋಡ್ ಮಾಡಿಕೊಳ್ಳಲು ಪ್ರೋತ್ಸಾಹಿಸಬೇಕು ಎಂದು ಮಾರ್ಗಸೂಚಿ ಹೇಳಿದೆ.
ಮಾರ್ಗಸೂಚಿಯಲ್ಲಿರುವ ಇತರ ಅಂಶಗಳೆಂದರೆ, ಸಂಶೋಧನಾ ವಿದ್ಯಾರ್ಥಿಗಳು ಹಾಗೂ ವಿಜ್ಞಾನ- ತಂತ್ರಜ್ಞಾನ ವಿಭಾಗದಲ್ಲಿ ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇರುವುದರಿಂದ, ಅವರು ತರಗತಿಗಳಿಗೆ ಹಾಜರಾಗಬಹುದು. ಉದ್ಯೋಗದ ಸಂದರ್ಶನ ಅಥವಾ ಶೈಕ್ಷಣಿಕ ದೃಷ್ಟಿಯಿಂದ ಅಂತಿಮ ವರ್ಷ ವಿದ್ಯಾರ್ಥಿಗಳು ಕಾಲೇಜಿಗೆ ಬರಬಹುದು. ಈ ಕುರಿತು ಆಯಾ ಕಾಲೇಜುಗಳ ಮುಖ್ಯಸ್ಥರೇ ನಿರ್ಧಾರ ಕೈಗೊಳ್ಳಬೇಕು. ವಿದ್ಯಾರ್ಥಿನಿಲಯಗಳಲ್ಲಿ ಕೊಠಡಿಯಲ್ಲಿ ಒಬ್ಬ ವಿದ್ಯಾರ್ಥಿಗೆ ಮಾತ್ರ ಅವಕಾಶ ಕೊಡಬೇಕು ಹಾಗೂ ಸೋಂಕಿನ ಲಕ್ಷಣ ಇರುವ ವಿದ್ಯಾರ್ಥಿಗಳಿಗೆ ವಾಸ್ತವ್ಯಕ್ಕೆ ಅವಕಾಶ ನೀಡಬಾರದು. ಹಂತ ಹಂತವಾಗಿ ತರಗತಿಗಳನ್ನು ಪ್ರಾರಂಭಿಸಲು ಯೋಜನೆ ರೂಪಿಸಬೇಕು. ಪರಸ್ಪರ ಅಂತರ ಕಾಯ್ದುಕೊಳ್ಳುವಿಕೆ, ಮುಖಗವಸು ಧರಿಸುವುದು ಇತ್ಯಾದಿ ಮುಂಜಾಗ್ರತಾ ಕ್ರಮಗಳ ಪಾಲನೆ ಮಾಡಬೇಕು.